
ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾದ ಬೆನ್ನಲ್ಲೇ ಮಲೆನಾಡಿನಲ್ಲಿ ಆಕ್ರೋಶ ಭುಗಿಲೆದ್ದಿದೆ. ರೈತನ ಸಾವನ್ನು ಖಂಡಿಸಿ ಇಂದು ಎನ್.ಆರ್.ಪುರ ಬಂದ್ಗೆ ರೈತ ಒಕ್ಕೂಟ ಕರೆ ನೀಡಿದೆ. ನಿರಂತರವಾಗಿ ನಡೆಯುತ್ತಿರುವ ಕಾಡಾನೆ ದಾಳಿ ಹಾಗೂ ಹಾವಳಿಯಿಂದ ಮಲೆನಾಡಿನ ರೈತರು ಕಂಗೆಟ್ಟಿದ್ದಾರೆ. 2025ರಿಂದ ಈವರೆಗೆ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ 13 ಮಂದಿ ಬಲಿಯಾಗಿದ್ದಾರೆ ಎನ್ನಲಾಗಿದ್ದು, ಇದೀಗ ಮತ್ತೊಂದು ಜೀವ ಬಲಿಯಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಬೇಲೂರು ಭಾಗದಲ್ಲಿರುವ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಓಡಿಸುವ ಬಗ್ಗೆ ಮಾಹಿತಿ ಹರಿದಾಡುತ್ತಿರುವುದು ಮಲೆನಾಡಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸುತ್ತಿರುವ ರೈತರು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರೈತರ ಜೀವ ಮತ್ತು ಬೆಳೆಗಳ ರಕ್ಷಣೆಗೆ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.




