
ಕಾರ್ಕಳ: ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರ ಅವರ ಮನೆಯ ಸಮೀಪ ಭೂಕುಸಿತ ಉಂಟಾಗುವ ಆತಂಕದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಆಗಸ್ಟ್ 4ರಂದು ಸಂಜೆ 5 ಗಂಟೆಗೆ ನಡೆದ ಪರಿಶೀಲನೆ ವೇಳೆ, ಭೂಕುಸಿತದಿಂದ ಆತಂಕಗೊಂಡಿರುವ ಎರಡೂ ಕುಟುಂಬಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ತಾತ್ಕಾಲಿಕವಾಗಿ ರೆಂಜಾಳ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅದರಂತೆ ಸಂತ್ರಸ್ತರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ, ಅವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಈ ಸಂದರ್ಭದಲ್ಲಿ ಕಾರ್ಕಳ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ, ಪಿಡಿಒ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರುಣ್ ಭಟ್ ಕಾರ್ಕಳ




