
ಚಿಕ್ಕಮಗಳೂರು: ಜಿಲ್ಲೆಯ ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಂಡಿದ್ದು, ಕಾಡಾನೆಯನ್ನು ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದಿಂದ ಐದು ಸಾಕಾನೆಗಳ ತಂಡವನ್ನು ಕರೆತರಲಾಗಿದೆ. ಈ ತಂಡ ಇಂದು ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮಕ್ಕೆ ಆಗಮಿಸಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಮೂರಲ್ಲಿ ನರಹಂತಕವಾಗಿರುವ ಒಂದು ಕಾಡಾನೆಯನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿದ್ದು, ಉಳಿದ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳ ಚಲನ-ವಲನಗಳನ್ನು ಗಮನಿಸುವಂತೆ ಸೂಚಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಕಾಡಾನೆ ದಾಳಿಗೆ ಯಲ್ಲಪ್ಪ ಮೃತಪಟ್ಟ ಘಟನೆಗೆ ಆಕ್ರೋಶಗೊಂಡ ರೈತರು ಬಾಳೆಹೊನ್ನೂರು ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿ, ತಕ್ಷಣ ಕಾಡಾನೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು.




