
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31 ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದೂ ಐಎಂಡಿ ತಿಳಿಸಿದೆ. ಉತ್ತರ ಒಳನಾಡಿಗೂ ಮಳೆಯ ಮುನ್ಸೂಚನೆ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ.



