
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ (67) ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ರಾತ್ರಿ ಆರೋಗ್ಯ ಸ್ಥಿತಿ ಕ್ಷೀಣಿಸಿ ಅವರು ಕೊನೆಯುಸಿರೆಳೆದಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಬಿ.ಸಿ. ನಾಗೇಶ್, ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ತಿಪಟೂರಿಗೆ ಕೊಂಡೊಯ್ಯಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಂದು ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ಪಿ.ಎಚ್. ಪೂಜಾರ್, ಎಸ್.ವಿ. ಸುಂಕನೂರ್, ಡಿ.ವಿ. ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ ನಾಯಕರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬಳಿಕ ಪಾರ್ಥಿವ ಶರೀರವನ್ನು ತಿಪಟೂರಿನ ಸ್ವಗೃಹಕ್ಕೆ ಕೊಂಡೊಯ್ದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಆ.20ರಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಬಿ.ಸಿ. ನಾಗೇಶ್ ಅವರ ಅಗಲಿಕೆಗೆ ರಾಜ್ಯ ರಾಜಕೀಯ ವಲಯದ ಗಣ್ಯರು ಹಾಗೂ ಬಿಜೆಪಿ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



