
ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯ ಮಾರುಕಟ್ಟೆ ಪಾರ್ಕಿಂಗ್ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ ಸಮರ್ಪಕ ನಿರ್ವಹಣೆ ಇಲ್ಲದೆ ದುರ್ನಾತ ಬೀರುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆರೋಪಿಸಿದ್ದಾರೆ. ಮಾರುಕಟ್ಟೆ ಪಾರ್ಕಿಂಗ್ ಪ್ರದೇಶದಲ್ಲಿ ತ್ಯಾಜ್ಯ, ಕೊಳೆತ ಮೀನು ಹಾಗೂ ಇತರ ಕಸ-ಕಡ್ಡಿಗಳು ರಾಶಿಯಾಗಿದ್ದು, ಸೂಕ್ತ ಶೌಚಾಲಯ ವ್ಯವಸ್ಥೆಯೂ ಇಲ್ಲದ ಕಾರಣ ಅಲ್ಲಿಯೇ ಮೂತ್ರ ವಿಸರ್ಜನೆ ನಡೆಯುತ್ತಿದೆ. ಇದರಿಂದ ಮಾರುಕಟ್ಟೆ ಪ್ರದೇಶದಲ್ಲಿ ಜನರು ಸಂಚರಿಸಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಮಾರುಕಟ್ಟೆ ಸುಂಕವನ್ನು ವಸೂಲಿ ಮಾಡುವವರು ಸ್ವಚ್ಛತೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನೂ ಸಮರ್ಪಕವಾಗಿ ನಿರ್ವಹಿಸಬೇಕು. ಪುರಸಭೆ ಅಧಿಕಾರಿಗಳು ನಿದ್ರೆಯಿಂದ ಎಚ್ಚೆತ್ತು ಮಾರುಕಟ್ಟೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ತಕ್ಷಣ ಸ್ವಚ್ಛತೆ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಸುಧಾರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಯ ಬಗ್ಗೆ ಗಮನಹರಿಸದಿದ್ದರೆ ಸಾರ್ವಜನಿಕರನ್ನು ಒಗ್ಗೂಡಿಸಿ ಪುರಸಭೆಗೆ ಮುತ್ತಿಗೆ ಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಾರ್ವಜನಿಕರು ನೆನಪಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡಿಕೊಳ್ಳಬಾರದು ಎಂದು ರಮಿತಾ ಸೂರ್ಯವಂಶಿ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.




