ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ಎಸ್ಐಆರ್ಗೂ ಮೊದಲಿನ ಹಳೆಯ ಮತದಾರರ ಪಟ್ಟಿಯನ್ನೇ ಬಳಸಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಎಸ್ಐಆರ್ ಬಳಿಕದ ಸಂಪೂರ್ಣ ಮತದಾರರ ದತ್ತಾಂಶ ಇನ್ನೂ ಲಭ್ಯವಾಗದ ಹಿನ್ನೆಲೆಯಲ್ಲಿ, 2026ರ ಏಪ್ರಿಲ್ 18ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿಯ ಆಧಾರದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದೆ. ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡು ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದರೂ, ಮತದಾರರ ಹೆಸರುಗಳ ಸೇರ್ಪಡೆ, ತೆಗೆದುಹಾಕುವಿಕೆ, ವರ್ಗಾವಣೆ ಹಾಗೂ ತಿದ್ದುಪಡಿಗಳಿಗೆ ಸಂಬಂಧಿಸಿದ ಸಂಪೂರ್ಣ ದೃಢೀಕೃತ ದತ್ತಾಂಶ ಚುನಾವಣಾ ಆಯೋಗಕ್ಕೆ ಇನ್ನೂ ಲಭ್ಯವಾಗಿಲ್ಲ. ವಾರ್ಡ್ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ಮ್ಯಾಪಿಂಗ್ ಮತ್ತು ಪರಿಶೀಲನೆ ಸೇರಿದಂತೆ ಕನಿಷ್ಠ ಎರಡು ತಿಂಗಳು ಹಾಗೂ ಚುನಾವಣೆ ನಡೆಸಲು ಮತ್ತೊಂದು ತಿಂಗಳು ಅಗತ್ಯವಿದೆ ಎಂದು ಆಯೋಗ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು 2027ರ ಜನವರಿ 31ರವರೆಗೆ ಕಾಲಾವಕಾಶ ವಿಸ್ತರಿಸುವಂತೆಯೂ ಮನವಿ ಮಾಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ 2026ರ ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ನಿರ್ದೇಶಿಸಿತ್ತು. ಅಲ್ಲದೆ, ರಾಜ್ಯದ ಎಲ್ಲಾ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2025ರ ಅಕ್ಟೋಬರ್ 1ರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಆಧಾರದಲ್ಲಿ ನಡೆಸಲು ಅವಕಾಶ ನೀಡುವಂತೆಯೂ ರಾಜ್ಯ ಚುನಾವಣಾ ಆಯೋಗ ಕೋರಿದೆ. ಹಳೆಯ ಮತದಾರರ ಪಟ್ಟಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ ನಿಗದಿತ ವಿಸ್ತೃತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸಾಧ್ಯವಾಗಲಿದೆ ಎಂದು ಆಯೋಗ ವಿಶ್ವಾಸ ವ್ಯಕ್ತಪಡಿಸಿದೆ.
