
ಚಿಕ್ಕಮಗಳೂರು: ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಸಮಗ್ರ ಶಿಕ್ಷಣ ಕರ್ನಾಟಕ ಇಲಾಖೆಯಿಂದ ಸುವರ್ಣಾವಕಾಶ ದೊರೆತಿದೆ. ವಿಶೇಷ ಅಗತ್ಯವುಳ್ಳ ಮಕ್ಕಳ ಶಿಕ್ಷಣ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ವಿವಿಧ ಬ್ಲಾಕ್ಗಳಲ್ಲಿ ಖಾಲಿ ಇರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಬಿ.ಐ.ಇ.ಆರ್.ಟಿ (BIERT) ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯುತ್ತಿದೆ. ಆರ್ಸಿಐ (RCI) ನಿಯಮಾವಳಿಗಳ ಪ್ರಕಾರ ನಿಗದಿಪಡಿಸಿರುವ ವಿಶೇಷ ಡಿ.ಇ.ಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಉದ್ಯೋಗಕ್ಕಾಗಿ ಕಾಯುತ್ತಿರುವ ವಿಶೇಷ ಡಿ.ಇ.ಡಿ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದ್ದು, ಆಯ್ಕೆಯಾದವರು ಸರ್ಕಾರಿ ಶಾಲೆಗಳಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 23, 2026ರ ಸಂಜೆ 5 ಗಂಟೆಯೊಳಗೆ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9448999334, 9448999391, 9480886931 ಹಾಗೂ 94806954260 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೇವಲ ಒಂದು ದಿನ ಮಾತ್ರ ಬಾಕಿ ಇರುವುದರಿಂದ ಅರ್ಹ ಅಭ್ಯರ್ಥಿಗಳು ತಡಮಾಡದೆ ಅರ್ಜಿ ಸಲ್ಲಿಸುವಂತೆ ಇಲಾಖೆ ಮನವಿ ಮಾಡಿದೆ.




