
ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರೋಗ್ಯ ಸಚಿವ ಯು.ಟಿ. ಖಾದರ್ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆರೋಗ್ಯ ಇಲಾಖೆಯನ್ನು ಜನರಿಗೆ ಇನ್ನಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ತಿಳಿಸಿದ ಅವರು, ಹಿಂದಿನ ಸಚಿವ ದಿನೇಶ್ ಗುಂಡು ರಾವ್ ಕೈಗೊಂಡ ಉತ್ತಮ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲಾಗುವುದು ಎಂದರು. ಆಯುಷ್ಮಾನ್ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿರುವ ಅವರು, ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಎಂಬಿಬಿಎಸ್ ಪದವೀಧರರಿಗೆ ಸಿಹಿಸುದ್ದಿ ನೀಡಿರುವ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಬಯಸುವವರು ಜಿಲ್ಲಾ ಆರೋಗ್ಯ ಅಧಿಕಾರಿಗೆ ನೇರವಾಗಿ ಅರ್ಜಿ ಸಲ್ಲಿಸಿ ವಾಕ್-ಇನ್ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ತಿಂಗಳಿಗೆ ₹60,000 ವೇತನದೊಂದಿಗೆ ಉದ್ಯೋಗ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸೇವೆಗಳನ್ನು ಇನ್ನಷ್ಟು ಸುಧಾರಿಸಲು ವೈದ್ಯರು ಹಾಗೂ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಲಾಗುವುದು ಎಂದ ಖಾದರ್, ತಮಗೆ ನೀಡಿರುವ ಖಾತೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವುದೇ ಮುಖ್ಯವಾಗಿದ್ದು, ಸಂತೋಷ ಹಾಗೂ ಸಮಾಧಾನದಿಂದ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.




