
ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿಯ ಇ-ಕೆವೈಸಿ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಸೆಪ್ಟೆಂಬರ್ 30ರವರೆಗೆ ಇದ್ದ ಗಡುವನ್ನು ಇದೀಗ ಅಕ್ಟೋಬರ್ 20ರವರೆಗೆ ವಿಸ್ತರಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿದಾರರು ಅಕ್ಟೋಬರ್ 20ರೊಳಗೆ ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ಜನರು ಆತಂಕಪಡುವ ಅಗತ್ಯವಿಲ್ಲ, ಗಡುವು ವಿಸ್ತರಿಸಲಾಗಿದ್ದು, ಇ-ಕೆವೈಸಿ ಪೂರ್ಣಗೊಳಿಸಿ ಸೌಲಭ್ಯ ಪಡೆಯುವಂತೆ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಇದೇ ವೇಳೆ ದಿನಗೂಲಿ ಕಾರ್ಮಿಕರು ಹಾಗೂ ಬಡವರ ಹಿತದೃಷ್ಟಿಯಿಂದ ಅಕ್ಟೋಬರ್ 1ರಿಂದ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿಯನ್ನೂ ಪರಿಷ್ಕರಿಸಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲಿವೆ.




