
ಚಿಕ್ಕಮಗಳೂರು : ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಅವಘಡ ಬಸ್ ನಿಲ್ದಾಣದೊಳಗೆ ನಡೆದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ಘಟನೆ ರಸ್ತೆ ಮಧ್ಯೆ ನಡೆದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಘಟನೆ ಬಳಿಕ ಸರ್ಕಾರಿ ಬಸ್ಗಳ ನಿರ್ವಹಣಾ ಸ್ಥಿತಿಗತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಬಸ್ಗಳ ತಾಂತ್ರಿಕ ಪರಿಶೀಲನೆ ಹಾಗೂ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.





