
ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚುತ್ತಿರುವುದನ್ನು ಗಮನಿಸಿ 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಉನ್ನತ ಶಿಕ್ಷಣ ಪರಿಷತ್ನಲ್ಲಿ ನಡೆದ ಕುಲಪತಿಗಳ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಅವರು, ಆಸ್ಟ್ರೇಲಿಯಾ ಮತ್ತು ಯೂರೋಪಿನ ಕೆಲವು ದೇಶಗಳಲ್ಲಿ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ಜಾರಿಯಲ್ಲಿದೆ ಎಂದು ಉಲ್ಲೇಖಿಸಿ, ನಮ್ಮ ರಾಜ್ಯದಲ್ಲೂ ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ತರಗತಿ ಓದು ಜೊತೆಗೆ ವೈಚಾರಿಕ, ವೈಜ್ಞಾನಿಕ ಮತ್ತು ಮೌಲ್ಯಾಧಾರಿತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸುವ ಕುರಿತು ಗಂಭೀರ ಚರ್ಚೆ ನಡೆಯುತ್ತಿದ್ದು, ಬಹುತೇಕ ಕುಲಪತಿಗಳು ಸಹಮತ ವ್ಯಕ್ತಪಡಿಸಿದ್ದಾರೆ ಎಂದರು. ಜೊತೆಗೆ ವಿಶ್ವವಿದ್ಯಾಲಯಗಳು ಜಗತ್ತಿನ ಬೆಳವಣಿಗೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ ಅವರನ್ನು ವಿಶ್ವಪ್ರಜೆಯನ್ನಾಗಿಸುವ ವೇದಿಕೆಯಾಗಬೇಕು, ಜಾತಿ-ಮತ ಭೇದಗಳನ್ನು ಮೀರಿ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸಬೇಕು, ವಿಶ್ವವಿದ್ಯಾಲಯಗಳು ಜಾತಿಕೂಪಗಳಾಗದಂತೆ ಯುವಜನತೆಯನ್ನು ಸಕಾರಾತ್ಮಕ ದಿಕ್ಕಿಗೆ ದಾರಿದೀಪ ಮಾಡುವ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಕರೆ ನೀಡಿದರು.




