
ಮಂಗಳೂರು: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬೃಹತ್ ಯೋಜನೆಗಳಿಗೆ ಒತ್ತು ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 32,611 ಕೋಟಿ ರೂ. ವೆಚ್ಚದ 61 ಯೋಜನೆಗಳಿಗೆ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಕುರಿತು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕರಾವಳಿ ಭಾಗಕ್ಕೆ ಸುಮಾರು 16 ಸಾವಿರ ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳು, ಪ್ರವಾಸೋದ್ಯಮ, ಮೂಲಸೌಕರ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದೇ ವೇಳೆ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ವಿಚಾರ ಸೇರಿದಂತೆ ಕರಾವಳಿ ಭಾಗದ ಪ್ರಮುಖ ಬೇಡಿಕೆಗಳ ಬಗ್ಗೆಯೂ ಚರ್ಚೆ ನಡೆದಿದೆ. ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದೆ ಎಂದು ಸಭೆಯಲ್ಲಿ ತಿಳಿಸಲಾಗಿದೆ.




