
ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲಾವಾರು ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದ್ದು, ಪ್ರವಾಹ ಹಾಗೂ ಭೂಕುಸಿತದ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ 64.5 ಮಿ.ಮೀ.ದಿಂದ 115.4 ಮಿ.ಮೀ.ವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು-ಸಿಡಿಲಿನೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ತಕ್ಷಣದ ಅಪಾಯ ಇಲ್ಲದಿದ್ದರೂ, ರಸ್ತೆಗಳಲ್ಲಿ ನೀರು ನಿಲ್ಲುವುದು, ಮರಗಳು ಉರುಳುವುದು ಹಾಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಸೂಚಿಸಲಾಗಿದೆ.
ಕರಾವಳಿ ಭಾಗದಲ್ಲಿ ಜುಲೈ 3 ಮತ್ತು 4ರಂದು ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 5ರಿಂದ 7ರವರೆಗೆ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ದಿನವೊಂದಕ್ಕೆ 204.5 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ನದಿಗಳ ನೀರಿನ ಮಟ್ಟ ಏರಿಕೆ, ತಗ್ಗು ಪ್ರದೇಶಗಳು ಜಲಾವೃತಗೊಳ್ಳುವುದು, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ಬೆಂಗಳೂರು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಆಗಾಗ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುಂದಿನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.




