
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಆಗಸ್ಟ್ 5ರಂದು ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ 40ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವೂ ಎಚ್ಚರಿಕೆ ಸಂದೇಶ ಹೊರಡಿಸಿದ್ದು, ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಿದೆ.




