
ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಕಳೆದ 11 ತಿಂಗಳಿನಿಂದ ಸಿಸಿಟಿವಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಪೊಲೀಸರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇಂತಹ ಬೇಜವಾಬ್ದಾರಿ ಉತ್ತರಗಳು ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಗ್ಗಿಸುತ್ತವೆ ಎಂದು ಹೇಳಿದೆ. ವೈಟ್ಫೀಲ್ಡ್ ಠಾಣೆ ಸಿಬ್ಬಂದಿಯಿಂದ ಕಿರುಕುಳವಾಗಿದೆ ಎಂದು ಆರೋಪಿಸಿ ಶೈಲಜಾ ಎಂಬ ಮಹಿಳೆ ಸಲ್ಲಿಸಿದ್ದ ದೂರಿನ ವಿಚಾರಣೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ತನಿಖೆ ಸಂದರ್ಭದಲ್ಲಿ ಯುಪಿಎಸ್ ಸಮಸ್ಯೆಯಿಂದಾಗಿ 11 ತಿಂಗಳಿನಿಂದ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಕೆ ಹಾಗೂ ಅವು ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದೆ. ಅಲ್ಲದೆ, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳ ಸಿಸಿಟಿವಿ ಕ್ಯಾಮೆರಾಗಳು ರಿಯಲ್ಟೈಮ್ನಲ್ಲಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಡಿಜಿ-ಐಜಿಪಿ ಕಚೇರಿಯಿಂದಲೇ ಲೈವ್ ಮಾನಿಟರ್ ಮಾಡುವ ವ್ಯವಸ್ಥೆ ರೂಪಿಸಬೇಕು ಎಂದು ನಿರ್ದೇಶನ ನೀಡಿದೆ. ಪೊಲೀಸ್ ಠಾಣೆಗಳಲ್ಲಿನ ಪ್ರತಿಯೊಂದು ಚಟುವಟಿಕೆಯ ಮೇಲ್ವಿಚಾರಣೆಗೆ ಸಿಸಿಟಿವಿ ವ್ಯವಸ್ಥೆ ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ಕಾರಣಕ್ಕೂ ಕ್ಯಾಮೆರಾಗಳು ಆಫ್ ಆಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.



