
ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅತ್ಯಂತ ಭಾವುಕರಾಗಿ ಮಾತನಾಡುತ್ತಾ ಮುಖ್ಯಮಂತ್ರಿ ಹುದ್ದೆ ಮೂರು ಬಾರಿ ಕೈತಪ್ಪಿದ ಕುರಿತು ತಮ್ಮ ಮನದ ನೋವನ್ನು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಯಾಗುವುದು ತಮ್ಮ ಬಹುಕಾಲದ ಕನಸಾಗಿದ್ದರೂ ರಾಜಕೀಯ ಸನ್ನಿವೇಶಗಳಿಂದಾಗಿ ಅದು ನನಸಾಗಲಿಲ್ಲ ಎಂದು ಅವರು ಹೇಳಿದ್ದಾರೆ. 2013ರ ವಿಧಾನಸಭಾ ಚುನಾವಣೆಯನ್ನು ಸ್ಮರಿಸಿದ ಪರಮೇಶ್ವರ್, ಅಂದು ತಾವು ಸೋತಿದ್ದರಿಂದ ಮುಖ್ಯಮಂತ್ರಿ ಹುದ್ದೆಯ ಅವಕಾಶ ಕೈತಪ್ಪಿತು. ತಾವು ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದರು. ಅಲ್ಲದೆ 2018ರ ಚುನಾವಣೆಯಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ ಮೈತ್ರಿ ಸರ್ಕಾರ ರಚನೆಯಾಗಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆ ಸಂದರ್ಭದಲ್ಲಿಯೂ ತಮ್ಮನ್ನು ಮುಖ್ಯಮಂತ್ರಿ ಮಾಡಬಹುದಾಗಿತ್ತು, ಆದರೆ ಆ ಅವಕಾಶ ದೊರೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು 2026ರ ಪ್ರಸ್ತುತ ರಾಜಕೀಯ ಬೆಳವಣಿಗೆಗಳಲ್ಲಿಯೂ ತಮಗೆ ಮುಖ್ಯಮಂತ್ರಿ ಹುದ್ದೆಯ ನಿರೀಕ್ಷೆ ಇತ್ತು. ಆದರೆ ವಿವಿಧ ರಾಜಕೀಯ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದರು. ಹೈಕಮಾಂಡ್ ಜೊತೆ ನಡೆದ ಚರ್ಚೆಯನ್ನು ನೆನಪಿಸಿಕೊಂಡ ಅವರು, “ನನಗೆ ಪಕ್ಷದ ಹಾಗೂ ಸಂಸ್ಥೆಯ ಶ್ರೇಯೋಭಿವೃದ್ಧಿಯೇ ಮುಖ್ಯ. ಮುಖ್ಯಮಂತ್ರಿ ಹುದ್ದೆ ನೀಡಲು ಸಾಧ್ಯವಿಲ್ಲದಿದ್ದರೆ ನೇರವಾಗಿ ಹೇಳಿ, ನನಗೆ ಬಹಳ ದೊಡ್ಡ ಕೆಲಸಗಳಿವೆ, ನಾನು ವಾಪಸ್ ಹೋಗುತ್ತೇನೆ ಎಂದು ಹೇಳಿದ್ದೆ” ಎಂದು ಹೇಳಿದರು. ಅಂತಿಮವಾಗಿ ಪಕ್ಷ ತಮ್ಮ ಮೇಲೆ ವಿಶ್ವಾಸವಿಟ್ಟು ಉಪಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿ ನೀಡಿದೆ ಎಂದು ತಿಳಿಸಿದರು. ಸದ್ಯ ತಮಗೆ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುವುದಾಗಿ ಹೇಳಿದ ಅವರು, ಜನರು ನಮ್ಮನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಆದ್ದರಿಂದ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಅಗತ್ಯ ಎಂದು ಮಾರ್ಮಿಕವಾಗಿ ನುಡಿದರು. ಸರ್ಕಾರದಲ್ಲಿ ಯಾವುದೇ ಕುಂದುಕೊರತೆ ಉಂಟಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ ಹಾಗೂ ಜನರ ನಿರೀಕ್ಷೆಗಳನ್ನು ಈಡೇರಿಸಲು ಶ್ರಮಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.




