
ಚಿಕ್ಕಮಗಳೂರು: ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಇಲಾಖೆಯಲ್ಲಿ ಅಕ್ರಮ ನಡೆಸಿ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿರುವ ಮೋಹನ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಏಕಕಾಲದಲ್ಲಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಕಡೂರಿನಲ್ಲಿರುವ ಅವರ ಸಹೋದರಿಯ ಮನೆ ಮೇಲೂ ದಾಳಿ ನಡೆಸಿ ದಾಖಲೆಗಳು ಮತ್ತು ಆಸ್ತಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ತಿರುಮಲೇಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ತಂಡ ಹಲವು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದು, ಅಕ್ರಮ ಆಸ್ತಿ ಗಳಿಕೆ ಕುರಿತಂತೆ ತನಿಖೆ ಮುಂದುವರಿದಿದೆ. ದಾಳಿಯ ವೇಳೆ ಮನೆಯಲ್ಲಿದ್ದ ದಾಖಲೆಗಳು, ಬ್ಯಾಂಕ್ ವ್ಯವಹಾರಗಳು ಹಾಗೂ ಆಸ್ತಿ ವಿವರಗಳನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಹೊರಬೀಳುವ ಸಾಧ್ಯತೆಯಿದೆ.




