ಧಾರವಾಡ: ಜಿಲ್ಲೆಯ ಹುಬ್ಬಳ್ಳಿ-ಧಾರವಾಡ (ಶಹರ) ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಅಪ್ಡೇಟ್ ನೀಡಿದ್ದು, ನಿಯಮಾನುಸಾರ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಪಟ್ಟಿಯನ್ನು ಜುಲೈ 16ರಂದು ಧಾರವಾಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಹುಬ್ಬಳ್ಳಿ-ಧಾರವಾಡ (ಶಹರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಸಂಬಂಧಿತ ಕಚೇರಿಗಳಿಗೆ ಭೇಟಿ ನೀಡಿ ತಮ್ಮ ಹೆಸರನ್ನು ಪರಿಶೀಲಿಸಬಹುದು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಯಾವುದೇ ದೋಷಗಳಿದ್ದರೆ ಅಥವಾ ಆಕ್ಷೇಪಣೆಗಳಿದ್ದರೆ ಪಟ್ಟಿ ಪ್ರಕಟವಾದ ದಿನಾಂಕದಿಂದ 7 ಕೆಲಸದ ದಿನಗಳೊಳಗೆ, ಅಂದರೆ ಜುಲೈ 23ರ ಸಂಜೆ 5.30 ಗಂಟೆಯೊಳಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿ ಅಥವಾ ಆಕ್ಷೇಪಣೆ ಸಲ್ಲಿಸಲು ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಸಮೀಪದ ಡಿ.ಸಿ. ಕಂಪೌಂಡ್ನ ಲೋಕೂರು ಬಿಲ್ಡಿಂಗ್ ಮೊದಲನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ, 0836-2440733 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
