
ಕಾರ್ಕಳ: ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಕಾರ್ಕಳ ಪೊಲೀಸ್ ಇಲಾಖೆಯ ಆಶ್ರಯದಲ್ಲಿ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪೊಲೀಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇಮಕಾತಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರವು ಸೋಮವಾರ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್., ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶಗಳು ಸಾಕಷ್ಟು ಲಭ್ಯವಿದ್ದರೂ ರಾಜ್ಯದ ವಿವಿಧ ಭಾಗಗಳಿಗೆ ಹೋಲಿಸಿದರೆ ಕರಾವಳಿ ಕರ್ನಾಟಕದ ಯುವಕರ ಪ್ರತಿನಿಧಿತ್ವ ಅತ್ಯಂತ ಕಡಿಮೆಯಾಗಿದೆ ಎಂದು ಹೇಳಿದರು. ಈ ಭಾಗದ ಯುವಕರು ಬುದ್ಧಿವಂತರಾಗಿದ್ದು, ವಿದ್ಯಾವಂತರೂ ಆಗಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆಯಲ್ಲಿ ದೊರೆಯುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಸೇವೆಗೆ ಸೇರ್ಪಡೆಯಾಗಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರಸನ್ನ ಎಂ.ಎಸ್., ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ನೇಮಕಾತಿ ಪ್ರಕ್ರಿಯೆ, ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಆಯ್ಕೆ ವಿಧಾನ, ಸೇವಾ ಸೌಲಭ್ಯಗಳು ಹಾಗೂ ಪೊಲೀಸ್ ಉದ್ಯೋಗದ ಮಹತ್ವದ ಕುರಿತು ಸಮಗ್ರ ಮಾಹಿತಿ ನೀಡಿದರು. ಅಭ್ಯರ್ಥಿಗಳ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿ, ಪರೀಕ್ಷೆಗೆ ಸಿದ್ಧತೆ ನಡೆಸುವ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಭಾಗದ ಯುವಕರಿಗೆ ಪೊಲೀಸ್ ನೇಮಕಾತಿ ಕುರಿತ ಸರಿಯಾದ ಮಾಹಿತಿ ತಲುಪಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ (ತನಿಖೆ) ನವೀನ್ ಬೊರ್ಕರ್, ಪ್ರೊಬೆಷನರಿ ಪಿಎಸ್ಐ ಸೀಮಾ ಅಂಜುಮ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಪತ್ರಕರ್ತರು ಹಾಗೂ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಲು ಆಸಕ್ತಿ ಹೊಂದಿದ್ದ ಅನೇಕ ಯುವಕರು ಉಪಸ್ಥಿತರಿದ್ದರು.




