
ಸಾಣೂರು: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸಾಣೂರಿನ ಹೆಮ್ಮೆಯ ಯುವಕ ಮಂಡಲ (ರಿ.) ಸಾಣೂರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ, ಕಾರ್ಕಳ ವಲಯದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ಯುವಕ ಮಂಡಲದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಯುವಕ ಮಂಡಲದ ಅಧ್ಯಕ್ಷ ಶ್ರೀ ಗುರುಪ್ರಸಾದ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಗ ಗುರು ಶ್ರೀ ಕೆ. ನರೇಂದ್ರ ಕಾಮತ್ ಅವರು ಯೋಗದ ಮಹತ್ವ, ಆರೋಗ್ಯಕರ ಜೀವನದಲ್ಲಿ ಅದರ ಪಾತ್ರ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಯೋಗ ನೀಡುವ ಕೊಡುಗೆ ಕುರಿತು ವಿವರಿಸಿದರು. ವಲಯದ ಹಿರಿಯ ಸದಸ್ಯ ಹಾಗೂ ಯೋಗ ಗುರು ಶ್ರೀ ಅಶೋಕ್ ಕುಮಾರ್ ಅವರು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟಿದ್ದು, ಭಾಗವಹಿಸಿದವರು ಉತ್ಸಾಹದಿಂದ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು. ಇದೇ ಸಂದರ್ಭದಲ್ಲಿ ಯೋಗ ಶಿಕ್ಷಣ, ತರಬೇತಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನೀಡಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಶ್ರೀ ಕೆ. ನರೇಂದ್ರ ಕಾಮತ್ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಾಣೂರು, ಎಸ್ಕೆಪಿಎ ಜಿಲ್ಲಾ ಉಪಾಧ್ಯಕ್ಷ ದತ್ತಾತ್ರೇಯ ಹಿರಿಯಂಗಡಿ, ಎಸ್ಕೆಪಿಎ ಮಾಜಿ ಅಧ್ಯಕ್ಷ ಜಗದೀಶ್ ಸಾಣೂರು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಎಸ್ಕೆಪಿಎ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಸ್ವಾಗತಿಸಿ, ಕೋಶಾಧಿಕಾರಿ ವಿ.ಆರ್. ಸತೀಶ್ ಆಚಾರ್ಯ ವಂದಿಸಿದರು.




