
ಕಾರ್ಕಳ : ಕಾರ್ಕಳ ನಗರದ ಕರಿಯಕಲ್ಲು ಡಂಪಿಂಗ್ ಯಾರ್ಡ್ಗೆ ಜುಲೈ 9ರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಕಸಕ್ಕೆ ಬೆಂಕಿ ವ್ಯಾಪಿಸಿ ದಟ್ಟ ಹೊಗೆ ಆವರಿಸಿರುವ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಡಂಪಿಂಗ್ ಯಾರ್ಡ್ನಲ್ಲಿ ಸಂಗ್ರಹವಾಗಿದ್ದ ಕಸದ ರಾಶಿಗೆ ಬೆಂಕಿ ವೇಗವಾಗಿ ವ್ಯಾಪಿಸುತ್ತಿದ್ದು, ದಟ್ಟ ಹೊಗೆ ಆವರಿಸಿರುವುದರಿಂದ ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಇನ್ನೂ ಎರಡು ದಿನಗಳ ಕಾಲ ಬೇಕಾಗಬಹುದು ಎಂದು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ. ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹರಿಪ್ರಸಾದ್, ಶ್ರೀಧರ್, ಭೀಮಪ್ಪ ಹಾಗೂ ಬಸವರಾಜ ಅವರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಡಂಪಿಂಗ್ ಯಾರ್ಡ್ನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಹೊಗೆ ವ್ಯಾಪಿಸಿದ್ದು, ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿಯಲಿದೆ.




