
ಕೊಟ್ಟಿಗೆಹಾರ: ಕಾಫಿನಾಡಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಗೆಳೆಯರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ೨೬ ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದ್ದು, ಮೃತ ಯುವಕನನ್ನು ನರೇಶ್ ಎಂದು ಗುರುತಿಸಲಾಗಿದೆ. ಮೂಲತಃ ಕಲಬುರಗಿ ಮೂಲದವರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ನರೇಶ್, ತನ್ನ ಸ್ನೇಹಿತರೊಂದಿಗೆ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ದೇವರಮನೆ ಗುಡ್ಡಕ್ಕೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸ ಮುಗಿಸಿಕೊಂಡು ಸ್ನೇಹಿತರೊಂದಿಗೆ ವಾಪಸ್ ತೆರಳುತ್ತಿದ್ದ ವೇಳೆ ನರೇಶ್ಗೆ ವಿಪರೀತ ಚಳಿ ಅನುಭವವಾಗಿದೆ. ಈ ವೇಳೆ ಚಳಿಯಿಂದ ರಕ್ಷಿಸಿಕೊಳ್ಳಲು ಕೋಟ್ ಧರಿಸುವ ಸಲುವಾಗಿ ಬೈಕ್ ನಿಲ್ಲಿಸಿದ ಸಂದರ್ಭದಲ್ಲಿ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಎಚ್ಚೆತ್ತ ಸ್ನೇಹಿತರು ಹಾಗೂ ಸ್ಥಳೀಯರು ನರೇಶ್ನನ್ನು ಬಣಕಲ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ನರೇಶ್ ಕೊನೆಯುಸಿರೆಳೆದಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಯುವಕ ದಿಢೀರ್ ಹೃದಯಾಘಾತದಿಂದ ಮೃತಪಟ್ಟಿರುವುದು ಸ್ನೇಹಿತರು ಹಾಗೂ ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಈ ಕುರಿತು ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.




