
ಅಜೆಕಾರು: ಮಹಿಳೆಯರು ತಮ್ಮ ಹಕ್ಕುಗಳು ಮತ್ತು ಕಾನೂನುಗಳ ಬಗ್ಗೆ ಸಮಗ್ರ ಅರಿವು ಹೊಂದಿರುವುದು ಅತ್ಯಂತ ಅಗತ್ಯ ಎಂದು ಖ್ಯಾತ ನ್ಯಾಯವಾದಿ ಹಾಗೂ ಕಾರ್ಕಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಹೇಳಿದರು. ಅಜೆಕಾರು ಕೈಕಂಬದ ಶ್ರೀ ಮಹಾದೇವಿ ಭಜನಾ ಮಂಡಳಿ (ರಿ.) ಮಹಿಳಾ ಸದಸ್ಯರಿಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಆಯೋಜಿಸಿದ್ದ ಕಾನೂನು ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು. ಮಹಿಳೆಯರ ಹಕ್ಕುಗಳು, ಕುಟುಂಬ ಸಂಬಂಧಿತ ಕಾನೂನುಗಳು, ಸೈಬರ್ ಅಪರಾಧಗಳು, ಆಸ್ತಿ ಹಕ್ಕು, ಮಹಿಳಾ ಸುರಕ್ಷತೆ ಸೇರಿದಂತೆ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಕಾನೂನುಗಳ ಕುರಿತು ಸರಳ ಹಾಗೂ ಪರಿಣಾಮಕಾರಿ ಮಾಹಿತಿ ನೀಡಿದ ಅವರು, ಕಾನೂನು ಅರಿವು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಸೇವೆ, ಕಾನೂನು ಜಾಗೃತಿ ಹಾಗೂ ಜನಸಾಮಾನ್ಯರಿಗೆ ಉಚಿತ ಕಾನೂನು ಮಾರ್ಗದರ್ಶನ ನೀಡುತ್ತಿರುವ ಸೇವೆಯನ್ನು ಗುರುತಿಸಿ ಪದ್ಮಪ್ರಸಾದ್ ಜೈನ್ ಅವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಸಂಘದ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ ಉಪಾಧ್ಯಕ್ಷ ದೇವರಾಜ್ ಶೆಟ್ಟಿ, ಸುರತ್ಕಲ್ ಉದ್ಘಾಟಿಸಿ, ಕಾರ್ಕಳ ವಲಯವು ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವುದನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಿತ್ರಾ ಭಂಡಾರಿ, ಶ್ರೀ ರಾಘವೇಂದ್ರ ಆಚಾರ್ಯ, ಶ್ರೀ ಮಹಾದೇವಿ ಭಜನಾ ಮಂಡಳಿಯ ಪದಾಧಿಕಾರಿಗಳು, ಮಹಿಳಾ ಮಂಡಳಿಯ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಎಸ್.ಕೆ.ಪಿ.ಎ. ಕೋಶಾಧಿಕಾರಿ ವಿ.ಆರ್. ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಕಳ ವಲಯದ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶೇಖರ್ ಕುಕ್ಕುಜೆ ವಂದನಾರ್ಪಣೆ ಸಲ್ಲಿಸಿದರು. ಶಿಬಿರದಲ್ಲಿ ಮಹಿಳಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾನೂನು ವಿಷಯಗಳ ಕುರಿತು ತಮ್ಮ ಸಂದೇಹಗಳಿಗೆ ಪರಿಹಾರ ಕಂಡುಕೊಂಡರು. ಕಾರ್ಯಕ್ರಮ ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.





