
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ಸಂಭವಿಸಿದ್ದು, ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಮೂಡಿಗೆರೆ ತಾಲ್ಲೂಕಿನಲ್ಲಿ ಮತ್ತೆ ಚಿರತೆ ಭೀತಿಯನ್ನು ಹೆಚ್ಚಿಸಿದ್ದು, ತೋಟ ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿದು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.




