
ಚಿಕ್ಕಮಗಳೂರು: ಮಲೆನಾಡಿಗರ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ಆರೋಪಿಸಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಿಕ್ಕಮಗಳೂರು ತಾಲೂಕಿನ ಸಂಗಮೇಶ್ವರಪೇಟೆಯಿಂದ ಬಾಳೆಹೊನ್ನೂರಿನವರೆಗೆ ಬೃಹತ್ ಪಾದಯಾತ್ರೆ ನಡೆಯಿತು. 3 ಸಾವಿರಕ್ಕೂ ಹೆಚ್ಚು ರೈತರು ಹಾಗೂ ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿ, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿದರು. ಖಾಂಡ್ಯ, ಹುಯಿಗೆರೆ, ಜಾಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸ್ಥಳೀಯರು ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಸಾವಿರಾರು ರೈತರು, ಸಾರ್ವಜನಿಕರು ಪಾದಯಾತ್ರೆಗೆ ಸಾಥ್ ನೀಡಿದರು. ಪಾದಯಾತ್ರೆಯ ಬಳಿಕ ಮಧ್ಯಾಹ್ನ ಬಾಳೆಹೊನ್ನೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿ, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ಮಲೆನಾಡಿಗರು ಒತ್ತಾಯಿಸಲಿದ್ದಾರೆ.




