
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಬಿಳಗುಳಿ ಗ್ರಾಮದ ಬಳಿ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ. ಶೀಲಾ ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ್ದು, ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಬಲವಾಗಿ ತಿವಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ತನಿಖೆ ಮತ್ತು ಅಗತ್ಯ ಕ್ರಮ ಕೈಗೊಂಡಿದ್ದಾರೆ.



