
ಚಿಕ್ಕಮಗಳೂರು ಜಿಲ್ಲೆ : ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಆಪರೇಷನ್ ಗಜ ಕಾರ್ಯಾಚರಣೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಕಾಡಾನೆಗಳ ಸ್ಥಳಾಂತರ ವಿರೋಧಿಸಿ ಇಂದು ಮೂಡಿಗೆರೆ ಸಂಪೂರ್ಣ ಬಂದ್ಗೆ ಕರೆ ನೀಡಲಾಗಿದೆ. ತತ್ಕೊಳ ಅರಣ್ಯದ ಮೂಲಕ ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಮುಂದಾಗಿರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಒಗ್ಗೂಡಿ ಬಂದ್ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮೂಡಿಗೆರೆ ಪಟ್ಟಣ ಸಂಪೂರ್ಣ ಬಂದ್ ಆಗಲಿದ್ದು, ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘಟನೆಗಳು ಕೂಡ ಬಂದ್ಗೆ ಬೆಂಬಲ ಸೂಚಿಸಿವೆ. ಇನ್ನು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಹೋರಾಟಗಾರರು ಮನವಿ ಮಾಡಿದ್ದು, ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ಹೋರಾಟಕ್ಕೆ ಬೆಂಬಲ ನೀಡುವಂತೆ ಕೋರಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಒಟ್ಟಿನಲ್ಲಿ ಆಪರೇಷನ್ ಗಜ ಕಾರ್ಯಾಚರಣೆಯ ವಿರುದ್ಧ ಮೂಡಿಗೆರೆಯಲ್ಲಿ ಪಕ್ಷಾತೀತವಾಗಿ ಆಕ್ರೋಶ ಭುಗಿಲೆದ್ದಿದ್ದು, ಇಂದಿನ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.




