
NEET Exam: ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಅವಕಾಶವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ವಿಧಾನ ಪರಿಷತ್ತಿನಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಹಂತ ಹಂತವಾಗಿ ಪರಿಣಾಮಕಾರಿ ಕೋಚಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ. ನೀಟ್ ಪರೀಕ್ಷೆ ಕಡ್ಡಾಯವಾದ ಬಳಿಕ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯುವುದು ದೊಡ್ಡ ಸವಾಲಾಗಿದ್ದು, ನಗರ ಪ್ರದೇಶದ ವಿದ್ಯಾರ್ಥಿಗಳು ಖಾಸಗಿ ತರಬೇತಿ ಕೇಂದ್ರಗಳಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯುತ್ತಿರುವಾಗ, ಹಳ್ಳಿಗಳ ವಿದ್ಯಾರ್ಥಿಗಳು ಸರಿಯಾದ ಮಾರ್ಗದರ್ಶನದ ಕೊರತೆಯಿಂದ ಹಿಂದುಳಿಯುತ್ತಿದ್ದಾರೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಸರ್ಕಾರಿ ಪಿಯು ಕಾಲೇಜುಗಳಲ್ಲಿಯೇ ಸಿಇಟಿ ಮತ್ತು ನೀಟ್ಗೆ ಉಚಿತ ತರಬೇತಿ ನೀಡುವ ಯೋಜನೆ ರೂಪಿಸುತ್ತಿದ್ದು, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸುವುದಕ್ಕೂ ಕ್ರಮ ಕೈಗೊಳ್ಳುತ್ತಿದೆ. ಸುಪ್ರೀಂ ಕೋರ್ಟ್ ನೀಟ್ ಪದ್ಧತಿಯನ್ನು ಮುಂದುವರಿಸಲು ಆದೇಶಿಸಿರುವ ಹಿನ್ನೆಲೆ, ಈಗ ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಉತ್ತಮವಾಗಿ ಎದುರಿಸಲು ಸರ್ಕಾರದಿಂದಲೇ ತರಬೇತಿ ನೀಡುವ ವ್ಯವಸ್ಥೆ ರೂಪಿಸಲಾಗುತ್ತಿದೆ.





