
ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ ಬಿಂಡಿಗ ದೇವೀರಮ್ಮನ ಜಾತ್ರೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ವರ್ಷಕ್ಕೊಮ್ಮೆ ಮಾತ್ರ ಸಮುದ್ರ ಮಟ್ಟದಿಂದ ಸುಮಾರು 3,800 ಅಡಿ ಎತ್ತರದ ಬೆಟ್ಟದ ತುದಿಯಲ್ಲಿ ಭಕ್ತರಿಗೆ ದರ್ಶನ ನೀಡುವ ದೇವೀರಮ್ಮನ ದರ್ಶನ ಪಡೆಯಲು ಈ ಬಾರಿಯೂ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಬಾರಿ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೇವಲ ಎರಡು ದಿನ ಮಾತ್ರ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾಗೂ ನವೆಂಬರ್ 8ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರು ಬೆಟ್ಟ ಹತ್ತಲು ಅವಕಾಶ ನೀಡಲಾಗಿದೆ. 15 ವರ್ಷ ಮೇಲ್ಪಟ್ಟವರು ಹಾಗೂ 60 ವರ್ಷದೊಳಗಿನವರಿಗೆ ಮಾತ್ರ ಬೆಟ್ಟ ಹತ್ತಲು ಅನುಮತಿ ನೀಡಲಾಗಿದ್ದು, ರಾತ್ರಿ ವೇಳೆ ಬೆಟ್ಟ ಹತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಬಿಂಡಿಗ ಮಲ್ಲೇನಹಳ್ಳಿ ಗ್ರಾಮದ ದೇವೀರಮ್ಮನ ಬೆಟ್ಟವು ಕಿರಿದಾದ ಹಾಗೂ ದುರ್ಗಮ ಹಾದಿಯನ್ನು ಹೊಂದಿದೆ. ಹೀಗಾಗಿ ಭಕ್ತರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಜಿಲ್ಲಾಡಳಿತ, ಅಗ್ನಿಶಾಮಕ ದಳದ ಸಿಬ್ಬಂದಿ, ಸಾವಿರಾರು ಪೊಲೀಸ್ ಸಿಬ್ಬಂದಿ, ಹೋಂ ಗಾರ್ಡ್ಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದೆ. ಇನ್ನು ಜಾತ್ರೆಯ ಸಿದ್ಧತೆ ಹಾಗೂ ಬೆಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ದಯ್ಮಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಬೆಟ್ಟವನ್ನೇರಿ ಪರಿಶೀಲನೆ ನಡೆಸಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಬೆಟ್ಟಾರೋಹಣದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.





