
ಬೆಂಗಳೂರು : ಐತಿಹಾಸಿಕ ಲಾಲ್ಬಾಗ್ ಉದ್ಯಾನವನದ ಮೂಲಕ ಟನಲ್ ರಸ್ತೆ ನಿರ್ಮಿಸಲಾಗುತ್ತದೆ ಎಂಬ ಆತಂಕಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತೆರೆ ಎಳೆದಿದ್ದು, ಯಾವುದೇ ಕಾರಣಕ್ಕೂ ಲಾಲ್ಬಾಗ್ ಒಳಭಾಗದಲ್ಲಿ ಸುರಂಗ ರಸ್ತೆ ನಿರ್ಮಿಸುವುದಿಲ್ಲ, ಕೊಟ್ಟ ಮಾತಿಗೆ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಲಾಲ್ಬಾಗ್ನಲ್ಲಿ ಟನಲ್ ರಸ್ತೆ ನಿರ್ಮಾಣದ ಯೋಜನೆಗೆ ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಅಭಿಯಾನ ನಡೆಸಿದ್ದರು. ಪರಿಸರ ಪ್ರೇಮಿಗಳ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸುರಂಗ ರಸ್ತೆಯ ಮಾರ್ಗ ವಿನ್ಯಾಸವನ್ನು ಬದಲಾಯಿಸಲು ಸರ್ಕಾರ ನಿರ್ಧರಿಸಿದೆ. ಲಾಲ್ಬಾಗ್ ಹೊರಭಾಗದಲ್ಲಿ ಟನಲ್ ರಸ್ತೆ ನಿರ್ಮಿಸುವ ಉದ್ದೇಶದಿಂದ ಪರ್ಯಾಯ ಮಾರ್ಗಗಳ ಹುಡುಕಾಟ ನಡೆಯುತ್ತಿದ್ದು, ಇದಕ್ಕಾಗಿ ಸಮೀಕ್ಷೆ ಕೈಗೊಳ್ಳಲಾಗಿದೆ. ಪ್ರಸ್ತುತ ಎರಡು ಪರ್ಯಾಯ ರಸ್ತೆ ಮಾರ್ಗಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಾರ್ಗ ಬದಲಾವಣೆಯಿಂದ ಯೋಜನೆಯ ವೆಚ್ಚ ಹೆಚ್ಚಾಗುವ ಸಾಧ್ಯತೆಯಿದ್ದು, ನಿರ್ಮಾಣದ ಅವಧಿಯೂ ಸ್ವಲ್ಪ ವಿಸ್ತರಣೆಯಾಗಬಹುದು. ಆದರೆ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಯಾವುದೇ ಕಾರಣಕ್ಕೂ ಸಾರ್ವಜನಿಕರ ಮೇಲೆ ಟೋಲ್ ದರ ಹೆಚ್ಚಿಸುವುದಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ. ಯೋಜನೆಯ ವೆಚ್ಚವನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ಉದ್ದೇಶದಿಂದ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಟನಲ್ ರಸ್ತೆ ಯೋಜನೆಗಾಗಿ ಸರ್ಕಾರದಿಂದ 7 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಕೃಷ್ಣ ಬೈರೇಗೌಡ ಘೋಷಿಸಿದ್ದಾರೆ. ಒಟ್ಟಾರೆ, ಲಾಲ್ಬಾಗ್ನ ಪರಿಸರ ಮತ್ತು ಉದ್ಯಾನವನದ ಸಂರಕ್ಷಣೆಗೆ ಆದ್ಯತೆ ನೀಡಿ, ಹೊರಭಾಗದಲ್ಲಿ ಸುರಂಗ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.




