
ಬೆಂಗಳೂರು: ರಾಜ್ಯ ಸರ್ಕಾರ ಗೃಹಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಹೆಸರಿನಲ್ಲಿ 2028ರ ವಿಧಾನಸಭೆ ಚುನಾವಣೆಗೆ ರಾಜಕೀಯ ತಂತ್ರ ರೂಪಿಸಲು ಮಾಹಿತಿ ಸಂಗ್ರಹಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗಾಗಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿರುವುದು ಹಾಗೂ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳಿಂದ ಫೋಟೋಗಳನ್ನು ಕಡ್ಡಾಯವಾಗಿ ಪಡೆಯುತ್ತಿರುವುದು ಕೇವಲ ಪರಿಷ್ಕರಣೆಗಾಗಿ ಅಲ್ಲ, ಅಮಾಯಕ ಜನರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಮುಂದಿನ ಚುನಾವಣಾ ತಂತ್ರಗಾರಿಕೆಗೆ ಬಳಸಿಕೊಳ್ಳುವ ಉದ್ದೇಶದಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದರು. ಅರ್ಹ ಫಲಾನುಭವಿಗಳನ್ನು ಗುರುತಿಸುವ ನೆಪದಲ್ಲಿ ಹಿಂದೆ “ಎಲ್ಲರಿಗೂ ಉಚಿತ” ಎಂದು ನೀಡಿದ್ದ ಭರವಸೆಯಿಂದ ಸರ್ಕಾರ ಹಿಂದೆ ಸರಿಯುತ್ತಿದ್ದು, ಅನರ್ಹರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಕಾರ್ಯ ಮಾಡುತ್ತಿದೆ ಎಂದು ಟೀಕಿಸಿದರು. ಕಳೆದ ಮೂರು ವರ್ಷಗಳಿಂದ ಯಾವುದೇ ಪರಿಷ್ಕರಣೆ ಮಾಡದ ಸರ್ಕಾರ ಈಗ ದಿಢೀರ್ ಸಮೀಕ್ಷೆ ಮತ್ತು ಮಾಹಿತಿ ಸಂಗ್ರಹಕ್ಕೆ ಮುಂದಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.




