ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ 19 ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿ ರಕ್ಷಿತ್ ಅವರ ಮೃತದೇಹ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಮೂಲದ ರಕ್ಷಿತ್, ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ನವೆಂಬರ್ 7ರಂದು ಚಿಕ್ಕಮಗಳೂರಿನ ಸರ್ಕಾರಿ ವೃತ್ತಿಪರ ಕಾಲೇಜಿನ ಬಾಲಕರ ನಿಲಯದಿಂದ ಅವರು ನಾಪತ್ತೆಯಾಗಿದ್ದರು. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತೇನೆ ಎಂಬ ಆತಂಕವನ್ನು ರಕ್ಷಿತ್ ತಮ್ಮ ಸ್ನೇಹಿತನ ಬಳಿ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಆದರೆ ಈ ಆತಂಕವೇ ಅವರ ಸಾವಿಗೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಇದೀಗ ನಗರದ ಹೊರವಲಯದ ಜಿಲ್ಲಾ ಪಂಚಾಯತ್ ಸಮೀಪದ ನಿರ್ಜನ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
