
ಸುಂಕಸಾಲೆ: ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ಸುಂಕಸಾಲೆ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸ್ಥಳೀಯ ವರ್ತಕರು ಕೂಡ ಸಂಪೂರ್ಣ ಬೆಂಬಲ ಸೂಚಿಸಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ರಾಣಿ ಜರಿ ಕಾಫಿ ಶಾಪ್ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಪಾದಯಾತ್ರೆಯಾಗಿ ಸಾಗಿತು. ಬಳಿಕ ಸುಂಕಸಾಲೆ ಗ್ರಾಮ ಪಂಚಾಯಿತಿ ಕಚೇರಿಯನ್ನು ತಲುಪಿದ ಪ್ರತಿಭಟನಾಕಾರರು, ಕಸ್ತೂರಿರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿದರು. ನಂತರ ಪಂಚಾಯಿತಿ ಆವರಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಮಹೇಶ್ ದುರ್ಗದಹಳ್ಳಿ ಹಾಗೂ ಪ್ರವೀಣ್ ಸುಂಕಸಾಲೆ, ಕಸ್ತೂರಿರಂಗನ್ ವರದಿ ಜಾರಿಯಾದರೆ ಮಲೆನಾಡಿನ ರೈತರು, ಗ್ರಾಮಸ್ಥರು ಹಾಗೂ ಜನಸಾಮಾನ್ಯರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. ವರದಿಯಲ್ಲಿರುವ ಕಠಿಣ ನಿಯಮಗಳು ಜಾರಿಯಾದರೆ ಮಲೆನಾಡಿಗರ ಮೂಲಭೂತ ಹಕ್ಕುಗಳು ಹಾಗೂ ಜೀವನೋಪಾಯಕ್ಕೆ ಧಕ್ಕೆಯಾಗಬಹುದು. ಹೀಗಾಗಿ ವರದಿಯ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಮಲೆನಾಡಿಗರ ಆತಂಕವನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ನ್ಯಾಯ ಒದಗಿಸುವುದು ಪ್ರತಿಭಟನೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಬಿ.ಪಿ. ಅಶೋಕ್, ಬಿ.ಎಸ್. ಜಯರಾಮ್, ಮಹೇಶ್ ದುರ್ಗದಹಳ್ಳಿ, ಪ್ರವೀಣ್ ಎಂ.ಜಿ., ರವಿ, ಈಶ್ವರ್ ಗೌಡ, ನೇತ್ರ ರತ್ನಾಕರ್, ಕೃಷ್ಣೇಗೌಡ ಅರಮನೆ ತಲಗೂರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸ್ಥಳೀಯ ಆಟೋ ಚಾಲಕರ ಸಂಘದ ಸದಸ್ಯರು, ಸ್ತ್ರೀಶಕ್ತಿ ಸಂಘಗಳ ಸದಸ್ಯೆಯರು ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ವರದಿ: ಸಂತೋಷ್ ಅತ್ತಿಗೆರೆ




