ಚಿಕ್ಕಮಗಳೂರು: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು. ಕನ್ನಡಪರ ಸಂಘಟನೆಗಳು, ರೈತ ಸಂಘ ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಹೋರಾಟಗಾರರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಹನುಮಂತಪ್ಪ ವೃತ್ತದಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಾಜೇಗೌಡ ಅವರು ಸೇರಿದಂತೆ ಕನ್ನಡಪರ ಹೋರಾಟಗಾರರು ಖಾಲಿ ಕೊಡ ಹಿಡಿದು ಉರುಳುಸೇವೆ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಹನುಮಂತಪ್ಪ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಎಂ.ಜಿ. ರಸ್ತೆಯ ಮೂಲಕ ಆಜಾದ್ ಪಾರ್ಕ್ವರೆಗೆ ಸಾಗಿತು. 50ಕ್ಕೂ ಹೆಚ್ಚು ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಬಂಧನಕ್ಕೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಸಂತೋಷ್ ಅತ್ತಿಗೆರೆ
