
ಚಿಕ್ಕಮಗಳೂರು: ವಿಧವಾ, ಅಂಗವಿಕಲ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಹಣ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಚಿಕ್ಕಮಗಳೂರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು. ಕಳೆದ 6–7 ತಿಂಗಳಿಂದ ಫಲಾನುಭವಿಗಳಿಗೆ ವೇತನದ ಹಣ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಇದರಿಂದ ಬಡವರು ಹಾಗೂ ವೃದ್ಧರು ಸೇರಿದಂತೆ ವಿವಿಧ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಫಿನಾಡಿನಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 69 ಸಾವಿರಕ್ಕೂ ಅಧಿಕ ಮಂದಿಗೆ ಹಣ ಬರಬೇಕಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದರು. ಕೂಡಲೇ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, 2 ಡಿಆರ್ ಹಾಗೂ 2 ಕೆಎಸ್ಆರ್ಪಿ ಸೇರಿದಂತೆ 150ಕ್ಕೂ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದರು. 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




