
ಚಿಕ್ಕಮಗಳೂರು: ಜಿಲ್ಲೆಯ ಲಿಂಗದಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ವಿಧಿಸಿ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ-1 ಮಹತ್ವದ ತೀರ್ಪು ನೀಡಿದೆ. 2025ರ ಡಿಸೆಂಬರ್ 1ರಂದು ದಾಖಲಾಗಿದ್ದ ಪ್ರಕರಣದಲ್ಲಿ ತರೀಕೆರೆ ತಾಲ್ಲೂಕಿನ ಧೂಪದಖಾನ್ ಗ್ರಾಮದ 34 ವರ್ಷದ ನಾಗರಾಜ ಎಂಬಾತ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಇದರ ಹಿನ್ನೆಲೆಯಲ್ಲಿ 2026ರ ಆಗಸ್ಟ್ 5ರಂದು ನ್ಯಾಯಾಲಯ ಆರೋಪಿಗೆ 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ವಿಧಿಸಿದೆ. ಇದರ ಜೊತೆಗೆ ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ–2011ರಡಿ ನೊಂದ ಬಾಲಕಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ತರೀಕೆರೆ ವೃತ್ತದ ಸಿಪಿಐ ಗಿರೀಶ್ ಬಿ.ವಿ. ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತ್ ಕುಮಾರ್ ಸಮರ್ಥವಾಗಿ ವಾದ ಮಂಡಿಸಿದ್ದರು. ತನಿಖಾ ಸಹಾಯಕರಾದ ಸಿದ್ಧರಾಮಪ್ಪ ಎಸ್.ಸಿ. ಹಾಗೂ ಉಮೇಶ್ ಅವರು ಸಹ ಪ್ರಕರಣದ ಯಶಸ್ವಿ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿ ಶ್ಲಾಘಿಸಿದ್ದಾರೆ.




