
ಬೆಂಗಳೂರು: ಬೆಂಗಳೂರು ಸುತ್ತಮುತ್ತ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಗುರುತಿಸುವಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈಗಾಗಲೇ ಮೂರು ಸ್ಥಳಗಳನ್ನು ಗುರುತಿಸಲಾಗಿದ್ದು, ಕನಕಪುರ ರಸ್ತೆಯ ಹಾರೋಹಳ್ಳಿ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬೀದರ್ ಶಾಸಕ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಕನಕಪುರ ರಸ್ತೆಯ ಸೋಮನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ ಗುಡವಾರನಹಳ್ಳಿ ಸೇರಿದಂತೆ ಮೂರು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು. ಸದ್ಯ ಕನಕಪುರ ರಸ್ತೆಯ ಹಾರೋಹಳ್ಳಿ ಪ್ರದೇಶದಲ್ಲಿ ಸೂಕ್ತ ಸ್ಥಳದ ಪರಿಶೀಲನೆ ನಡೆಯುತ್ತಿದೆ ಎಂದರು. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಸಮಿತಿಯು ಗುರುತಿಸಲಾದ ಮೂರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳ ಅಂತಿಮಗೊಂಡ ಬಳಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಜಮೀನು ಪಡೆಯುವ ಕುರಿತು ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.




