
ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿಗಾಗಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ಶಾಲೆಗಳು ಪುನಾರಂಭವಾಗಲಿವೆ. ಈ ಸಾಲಿನ ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 2ರವರೆಗೆ, ಎರಡನೇ ಅವಧಿ ಅಕ್ಟೋಬರ್ 22ರಿಂದ 2027ರ ಏಪ್ರಿಲ್ 10ರವರೆಗೆ ನಡೆಯಲಿದ್ದು, ಅಕ್ಟೋಬರ್ 3ರಿಂದ 21ರವರೆಗೆ ಒಟ್ಟು 19 ದಿನಗಳ ದಸರಾ ರಜೆ ನೀಡಲಾಗಿದೆ. ಒಟ್ಟು 365 ದಿನಗಳಲ್ಲಿ 119 ರಜೆ ದಿನಗಳು ಹಾಗೂ 245 ಕರ್ತವ್ಯದ ದಿನಗಳನ್ನು ನಿಗದಿಪಡಿಸಲಾಗಿದ್ದು, ಈ ಅವಧಿಯಲ್ಲಿ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಕಾರ್ಯಗಳಿಗೆ 26 ದಿನಗಳು, ಪಕ್ಷೇತರ ಚಟುವಟಿಕೆಗಳಿಗೆ 24 ದಿನಗಳು, ಮೌಲ್ಯಮಾಪನ ಹಾಗೂ ಫಲಿತಾಂಶ ವಿಶ್ಲೇಷಣೆಗೆ 10 ದಿನಗಳು, ಸ್ಥಳೀಯ ರಜೆಗಳಿಗೆ 4 ದಿನಗಳು ಹಾಗೂ ಬೋಧನಾ-ಕಲಿಕಾ ಪ್ರಕ್ರಿಯೆಗೆ 181 ದಿನಗಳನ್ನು ಮೀಸಲಿಡಲಾಗಿದೆ. ಶಾಲೆಗಳಲ್ಲಿಯ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಈ ವೇಳಾಪಟ್ಟಿಯನ್ನು ಅನುಸರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ, ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಹಾಗೂ 6ರಿಂದ 18 ವರ್ಷದ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ದಾಖಲಾತಿ ಜಾಗೃತಿ ಅಭಿಯಾನ ನಡೆಸುವಂತೆ ಇಲಾಖೆ ನಿರ್ದೇಶನ ನೀಡಿದೆ.




