
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಬಳಿ ಕೆಎಸ್ಆರ್ಟಿಸಿ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದು, ಪ್ರತಿದಿನ ನೂರಾರು ಪ್ರವಾಸಿಗರು ತೇಜಸ್ವಿ ಪ್ರತಿಷ್ಠಾನದಲ್ಲಿರುವ ವಸ್ತು ಸಂಗ್ರಹಾಲಯ, ಕೀಟ ಸಂಗ್ರಹಾಲಯ, ಆರ್ಕೀಡೇರಿಯಂ ಹಾಗೂ ಚಿಟ್ಟೆ ಉದ್ಯಾನವನವನ್ನು ವೀಕ್ಷಿಸಲು ಆಗಮಿಸುತ್ತಾರೆ ಮತ್ತು ವಾರಾಂತ್ಯ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಾಗುತ್ತದೆ. ಆದರೆ ಬಸ್ ನಿಲುಗಡೆ ಇಲ್ಲದ ಕಾರಣ ಪ್ರವಾಸಿಗರು ಕೊಟ್ಟಿಗೆಹಾರದಿಂದ ಖಾಸಗಿ ವಾಹನಗಳಲ್ಲಿ ಅಥವಾ ನಡೆದುಕೊಂಡು ಬರಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದೇ ಪ್ರದೇಶದ ಪಕ್ಕದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪೋಷಕರು ಆಗಾಗ ಭೇಟಿ ನೀಡುವುದರ ಜೊತೆಗೆ ರಜಾದಿನಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಂಚಾರ ನಡೆಸುವಾಗಲೂ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ತೇಜಸ್ವಿ ಪ್ರತಿಷ್ಠಾನದ ಬಳಿ ಕೆಎಸ್ಆರ್ಟಿಸಿ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಿದರೆ ಪ್ರವಾಸಿಗರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಎಲ್ಲರಿಗೂ ಅನುಕೂಲವಾಗಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತಕ್ಷಣ ಗಮನ ಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.




