
ಚಿಕ್ಕಮಗಳೂರು: ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಾಲಯದ ಬಳಿಕ ಇದೀಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರವಾಸಿಗರ ಅಸಭ್ಯ ವರ್ತನೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಉಂಟುಮಾಡಿರುವ ಘಟನೆ ಬೆಳಕಿಗೆ ಬಂದಿದೆ. ದೇವಾಲಯದ ಸುತ್ತಮುತ್ತ ಮದ್ಯಪಾನ ಮಾಡುವುದು ಹಾಗೂ ಸಿಗರೇಟ್ ಸೇದುವಂತಹ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಿದ್ದು, ಇದರಿಂದ ಭಕ್ತರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಇದೇ ವೇಳೆ ದೇವಸ್ಥಾನದ ಆವರಣದಲ್ಲಿ ಸಿಗರೇಟ್ ಸೇದುತ್ತಿದ್ದ ಪ್ರವಾಸಿಗನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲ ಪ್ರವಾಸಿಗರು ದೇವಸ್ಥಾನದ ಸುತ್ತ ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಿರುವುದಾಗಿ ಆರೋಪಗಳು ಕೇಳಿಬಂದಿದ್ದು, ಈ ಪರಿಸ್ಥಿತಿಗೆ ಅರಣ್ಯ ಇಲಾಖೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣವೆಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನದ ಪಾವಿತ್ರ್ಯತೆ ಹಾಗೂ ಶಾಂತ ವಾತಾವರಣ ಕಾಪಾಡಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ಭಕ್ತರು ಒತ್ತಾಯಿಸಿದ್ದಾರೆ.




