
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದ್ದು, ತಾಲೂಕಿನ ಕಲ್ಮಕ್ಕಿ ಹಿನಾರಿ ಗ್ರಾಮದಲ್ಲಿ ವನಜಾಕ್ಷಿ ಎಂಬುವರ ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿ ಸಂಪೂರ್ಣ ಜಖಂಗೊಂಡಿದೆ. ಘಟನೆಯ ವೇಳೆ ಮನೆಯಲ್ಲಿ ಇದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿ ಹಾನಿಗೊಳಗಾಗುವುದರ ಜೊತೆಗೆ ಗೃಹಪಯೋಗಿ ವಸ್ತುಗಳೂ ನಾಶವಾಗಿವೆ. ಘಟನೆ ತಿಳಿಯುತ್ತಿದ್ದಂತೆ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತ ವನಜಾಕ್ಷಿ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.





