
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ಲಾರಿ ನಿಲ್ಲಿಸಲಿಲ್ಲವೆಂದು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಬೆಳಗಿನ ಜಾವ ಸುಮಾರು 4 ಗಂಟೆಗೆ ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಂಗಳೂರು ಮೂಲದ ಲಾರಿಗೆ ನಾಲ್ವರು ಯುವಕರು ಕೈ ಅಡ್ಡಹಾಕಿ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಆದರೆ ಚಾಲಕ ಲಾರಿ ನಿಲ್ಲಿಸದೆ ಮುಂದೆ ಸಾಗಿದ್ದರಿಂದ ಕೆರಳಿದ ಯುವಕರು ಲಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಗಾಂಜಾ ಸೇವನೆಯ ಅಮಲಿನಲ್ಲಿದ್ದರು ಎಂಬ ಶಂಕೆ ವ್ಯಕ್ತವಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುವ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ವರದಿ: ಸಂತೋಷ್ ಅತ್ತಿಗೆರೆ




