ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂಬ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಗಳ ಅನ್ವಯ ಈಗಾಗಲೇ 500ಕ್ಕೂ ಹೆಚ್ಚು ಹೋಂಸ್ಟೇಗಳು ನೋಂದಣಿಗೆ ಅರ್ಜಿ ಸಲ್ಲಿಸಿವೆ. ‘ಹೋಂಸ್ಟೇ ಎಸ್ಟಾಬ್ಲಿಷ್ಮೆಂಟ್ ನೋಂದಣಿ ಮಾರ್ಗಸೂಚಿ–2025’ರಡಿ ಇನ್ನೂ ನೋಂದಣಿ ಮಾಡಿಸದ ಹೋಂಸ್ಟೇ ಮಾಲೀಕರು ಕಡ್ಡಾಯವಾಗಿ ಅರ್ಜಿ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತ ವಿ. ರಾಮ್ ಪ್ರಸಾತ್ ಮನೋಹರ್ ಸೂಚಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಅಮೆರಿಕದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಬಳಿಕ ಹೋಂಸ್ಟೇಗಳ ಸುರಕ್ಷತೆ ಮತ್ತು ನಿಯಂತ್ರಣದ ದೃಷ್ಟಿಯಿಂದ ಸರ್ಕಾರ ಈ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ಈವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಸುಮಾರು 400 ಅರ್ಜಿಗಳ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಘಟಕದ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಹೋಂಸ್ಟೇಗಳಲ್ಲಿ ಮೂಲಸೌಕರ್ಯ, ಸುರಕ್ಷತೆ, ಸ್ವಚ್ಛತೆ ಹಾಗೂ ಕಾರ್ಯಾಚರಣೆಗೆ ಸಂಬಂಧಿಸಿದ ನಿಗದಿತ ಮಾನದಂಡಗಳನ್ನು ಪೂರೈಸಿದವರಿಗೆ ಮಾತ್ರ ನೋಂದಣಿ ಪ್ರಮಾಣಪತ್ರ ನೀಡಲಾಗುತ್ತದೆ. ಮಾನದಂಡಗಳನ್ನು ಪೂರೈಸದ ಹೋಂಸ್ಟೇಗಳಿಗೆ ನೋಂದಣಿ ನಿರಾಕರಿಸಲಾಗುವುದಲ್ಲದೆ, ಕೊರತೆಗಳನ್ನು ಸರಿಪಡಿಸಿದ ಬಳಿಕ ಮರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಪರಿಶೀಲನೆ ಪೂರ್ಣಗೊಂಡು ಸಂಬಂಧಿತ ಪ್ರಾಧಿಕಾರದ ಅನುಮೋದನೆ ದೊರೆತ ಬಳಿಕ 45 ದಿನಗಳೊಳಗೆ ನೋಂದಣಿ ಪ್ರಮಾಣಪತ್ರ ವಿತರಿಸಲಾಗುತ್ತಿದ್ದು, ಈ ಪ್ರಮಾಣಪತ್ರಕ್ಕೆ ಐದು ವರ್ಷಗಳ ಮಾನ್ಯತೆ ಇರಲಿದೆ. ಈ ಕ್ರಮದಿಂದ ರಾಜ್ಯದಲ್ಲಿನ ಹೋಂಸ್ಟೇಗಳ ಅಧಿಕೃತ ಡೇಟಾಬೇಸ್ ನಿರ್ಮಾಣವಾಗುವುದರ ಜೊತೆಗೆ, ಪ್ರವಾಸಿಗರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ವಸತಿ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ.
