
ಕಾರ್ಕಳ: ಕಾರ್ಕಳ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿನ ವಿವಿಧ ಸಮಸ್ಯೆಗಳನ್ನು ಶೀಘ್ರವಾಗಿ ಸರಿಪಡಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ. ಕಾಂಗ್ರೆಸ್ ಕಚೇರಿಯಲ್ಲಿ ಸಲ್ಲಿಸಿದ ಮನವಿಯಲ್ಲಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯು.ಟಿ. ಖಾದರ್ ಆರೋಗ್ಯ ಸಚಿವರಾಗಿದ್ದ ವೇಳೆ ನೀಡಿದ ಅನುದಾನದ ಫಲವಾಗಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದು, ಆದರೆ ನಿರ್ವಹಣಾ ಜವಾಬ್ದಾರರ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ. ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ವೈದ್ಯರ ಅಲಭ್ಯತೆ, ಮಕ್ಕಳ ವಿಭಾಗ, ಸ್ಕ್ಯಾನಿಂಗ್ ಹಾಗೂ ಎಕ್ಸ್ರೇ ವಿಭಾಗಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಸರ್ಕಾರಿ ರಜಾ ದಿನಗಳಲ್ಲಿ ವೈದ್ಯರ ಅಲಭ್ಯತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದೇ ವೇಳೆ ತಾಲೂಕಿನ ಬಜಗೋಳಿ ಹಾಗೂ ಅಜೆಕಾರ್ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ದೊಡ್ಡರಂಗಡಿ ಆರೋಗ್ಯ ಕೇಂದ್ರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷ ಶುಭದರಾವ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಅಧ್ಯಕ್ಷ ಗೋಲಿನಾಥ್ ಭಟ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ, ಮಹಿಳಾ ಅಧ್ಯಕ್ಷೆ ಭಾನು ಭಾಸ್ಕರ್, ಇಂಟಕ್ ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆ, ಕೆಎಂಎಫ್ ನಿರ್ದೇಶಕ ಸುಧಾಕರ್ ಶೆಟ್ಟಿ, ಪೃಥ್ವಿರಾಜ್ ಜೈನ್, ಸದಾನಂದ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಅರುಣ್ ಭಟ್ ಕಾರ್ಕಳ




