ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದಂಟರಮಕ್ಕಿ–ದೀಪಾ ನರ್ಸಿಂಗ್ ಹೋಂ ರಸ್ತೆಯಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಈಶ್ವರ ರಾವ್ ಅವರಿಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಬೈಕ್ ಸವಾರ ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಗಾಯಗೊಂಡ ಈಶ್ವರ ರಾವ್ ಅವರನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಮೇಶ್ ನಾಯ್ಕ್ ಮತ್ತು ರಾಜಾನಾಯ್ಕ್ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಪಿಕ್ಅಪ್ ವಾಹನ ಡಿಕ್ಕಿ ಹೊಡೆದಿದೆ. ಅಂತರಘಟ್ಟೆ ರಸ್ತೆ ಕಡೆಯಿಂದ ಬಂದ ಪಿಕ್ಅಪ್ ವಾಹನ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಹಾಗೂ ಹಾಸನದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪಿಕ್ಅಪ್ ಚಾಲಕ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವರ ಕಾರ್ಯಕ್ಕಾಗಿ ನಡೆದುಕೊಂಡು ಹೋಗುತ್ತಿದ್ದ ವೆಂಕಟೇಶ್ ಎಂಬುವವರಿಗೆ ಹಿಂಬದಿಯಿಂದ ಬಂದ ಬಿಳಿ ಬಣ್ಣದ ಬೊಲೆರೋ ಪಿಕ್ಅಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಾಯಾಳುವನ್ನು ಕಡೂರಿನ ಚೇತನ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪರಾರಿಯಾದ ವಾಹನ ಚಾಲಕನ ವಿರುದ್ಧ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿದ್ದು, ಬಳಿಕ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪ್ರಕರಣದಲ್ಲಿ ಬೈಕ್ ಚಾಲಕ ಹಾಗೂ ವಾಹನ ಮಾಲೀಕರ ವಿರುದ್ಧ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದೆಡೆ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಗಂಗೂರು ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಕಡೆಯಿಂದ ಬಂದ ಎಂಜಿ ಹೆಕ್ಟರ್ ಕಾರು, ಮಾರುತಿ ಸುಜುಕಿ ಫ್ರಾಂಕ್ಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲವಾದರೂ ಫ್ರಾಂಕ್ಸ್ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಎಂಜಿ ಹೆಕ್ಟರ್ ಚಾಲಕ ಮಹಮದ್ ಸೋಯಬ್ ವಿರುದ್ಧ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲೆಯ ವಿವಿಧೆಡೆ ನಡೆದ ಈ ಅಪಘಾತ ಪ್ರಕರಣಗಳಲ್ಲಿ ದುಡುಕು, ಅಜಾಗರೂಕ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪ ಕೇಳಿಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
