
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನದಿಯಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಕೋರಿದ್ದ ಎರಡು ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 2,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿದೆ. ನವದೆಹಲಿಯಲ್ಲಿ ನಡೆದ CWRCಯ 147ನೇ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಸಮಿತಿಯ ಅಧ್ಯಕ್ಷ ವಿನೀತ್ ಗುಪ್ತ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ಒಳಹರಿವು ಹಾಗೂ ನೀರಿನ ಸಂಗ್ರಹದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಈ ಶಿಫಾರಸು ಮಾಡಲಾಗಿದೆ.ಇಂದು ಬೆಳಿಗ್ಗೆಯಷ್ಟೇ ಕರ್ನಾಟಕದಿಂದ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ, ಮೂರನೇ ಅರ್ಜಿಯನ್ನೂ ವಜಾಗೊಳಿಸುವ ಎಚ್ಚರಿಕೆ ನೀಡಿತ್ತು. ಈ ಬೆಳವಣಿಗೆಯ ನಡುವೆಯೇ CWRC ಮಾಡಿರುವ ಹೊಸ ಶಿಫಾರಸು ಮಹತ್ವ ಪಡೆದುಕೊಂಡಿದೆ. ಆದರೆ CWRCಯ ಶಿಫಾರಸು ಅಂತಿಮ ನಿರ್ಧಾರವಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಅನುಮೋದನೆ ಅಗತ್ಯವಿದೆ. ನವೆಂಬರ್ 25ರಂದು ನಡೆಯಲಿರುವ CWMA ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಹೊರಬೀಳುವ ನಿರೀಕ್ಷೆಯಿದೆ. ಹೀಗಾಗಿ ಕರ್ನಾಟಕಕ್ಕೆ ನೀರು ಬಿಡುಗಡೆ ವಿಚಾರದಲ್ಲಿ ಮತ್ತೆ ಆತಂಕ ಎದುರಾಗಿದೆ.




