
ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಹಲವು ಮಹತ್ವದ ಯೋಜನೆಗಳ ಜೊತೆಗೆ ಮಕ್ಕಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ನಿರ್ಧಾರವನ್ನೂ ಸರ್ಕಾರ ಘೋಷಿಸಿದೆ. ಇದರಂತೆ ಇನ್ಮುಂದೆ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿರ್ಬಂಧ ವಿಧಿಸಲಾಗುತ್ತದೆ. ಶಾಲಾ ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ಕೆಟ್ಟ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಆಸ್ಟ್ರೇಲಿಯಾದಲ್ಲಿ ಜಾರಿಯಲ್ಲಿರುವ ನಿಯಮದ ಮಾದರಿಯಲ್ಲೇ ಫೇಸ್ಬುಕ್, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಮಕ್ಕಳಿಗೆ ನಿಷೇಧಿಸುವ ಯೋಜನೆ ರೂಪಿಸಲಾಗಿದೆ. ಜೊತೆಗೆ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಜಾಗೃತಿ ಕಾರ್ಯಕ್ರಮಗಳು, ಕಠಿಣ ನಿಯಮಗಳು ಮತ್ತು ಸಹಾಯ ಕೇಂದ್ರಗಳ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.




