
ಶೃಂಗೇರಿ: ಜಯ ಭಾರತೀ ವಿದ್ಯಾಲಯದಲ್ಲಿ ನೂತನ ಶೈಕ್ಷಣಿಕ ಸಾಲಿನ ಅಂಗವಾಗಿ ಪ್ರತಿಭಾನ್ವೇಷಣೆ ಕಾರ್ಯಕ್ರಮ, ಶಾಲಾ ವಿದ್ಯಾರ್ಥಿ ನಾಯಕ ಹಾಗೂ ಉಪನಾಯಕರ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಖಜಾಂಚಿ ಜೇಸೀ ಹೆಚ್.ಎನ್. ವಿಶ್ವೇಶ್ವರ್ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸೂಪ್ತ ಪ್ರತಿಭೆಗಳನ್ನು ಗುರುತಿಸಿ ಅನಾವರಣಗೊಳಿಸಲು ಶಾಲೆಯು ಇಂತಹ ವೇದಿಕೆಗಳನ್ನು ಕಲ್ಪಿಸುತ್ತಿದ್ದು, ಎಲ್ಲ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಹೊರಹಾಕಬೇಕು ಎಂದು ಕರೆ ನೀಡಿದರು. ಶೃಂಗೇರಿ ಜೆಸಿಐ ಅಧ್ಯಕ್ಷೆ ಜೇಸೀ ಕಾವ್ಯಶ್ರೀ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಭೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ವಿನಯ್ ಸಿ.ಜಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ನಿನ್ನೆ ಬ್ಯಾಲೆಟ್ ಪೇಪರ್ ಮೂಲಕ ನಡೆಸಲಾದ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಯಿತು. ಚುನಾವಣೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ರಂಜಿತಾ ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಹಾಗೂ 9ನೇ ತರಗತಿಯ ವಿದ್ಯಾರ್ಥಿ ಹರ್ಷ ಡಿ.ಹೆಚ್. ಶಾಲಾ ವಿದ್ಯಾರ್ಥಿ ಉಪನಾಯಕನಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ನಾಯಕ ಮತ್ತು ಉಪನಾಯಕರಿಗೆ ಜೇಸೀ ಹೆಚ್.ಎನ್. ವಿಶ್ವೇಶ್ವರ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ಉದ್ದೇಶದಿಂದ ವಿವಿಧ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಅವನಿ ಹಾಗೂ ಪುಣ್ಯ ನಿರೂಪಿಸಿದರೆ, ಆಪ್ತಿ ಸ್ವಾಗತಿಸಿದರು ಹಾಗೂ ವರ್ಷಿಣಿ ವಂದಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.




