
ಚಿಕ್ಕಮಗಳೂರು: ಶೃಂಗೇರಿ ತಾಲೂಕು ಪಂಚಾಯಿತಿ ಇಓ ಸುದೀಪ್ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಿಡಿಓ ಸಂಘದ ನೇತೃತ್ವದಲ್ಲಿ ಪಿಡಿಓಗಳು ಬಾಳೆಹೊನ್ನೂರು ಪೊಲೀಸ್ ಠಾಣೆ ಎದುರು ಮೌನ ಪ್ರತಿಭಟನೆ ನಡೆಸಿದ್ದು, ಹಲ್ಲೆ ನಡೆಸಿದ್ದಾರೆ ಎನ್ನಲಾದ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಕುಕ್ಕುಡಿಗೆ ಅವರನ್ನು ಬಂಧಿಸುವಂತೆ ಪಟ್ಟು ಹಿಡಿದರು. ಶನಿವಾರ ಕಸ್ತೂರಿ ರಂಗನ್ ವರದಿ ಕುರಿತ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿದ್ದ ಸಂದರ್ಭದಲ್ಲಿ ಇಓಗಳು ಕೂಡ ಕಾರ್ಯಕ್ರಮಕ್ಕೆ ತೆರಳಿದ್ದು, ಕಾರ್ಯಕ್ರಮ ಮುಗಿದ ಬಳಿಕ ಹೋಟೆಲ್ಗೆ ತೆರಳಿದ್ದ ಇಓಗಳು ಹೋಟೆಲ್ನಿಂದ ಹೊರಬಂದಾಗ ಬಾಳೆಹೊನ್ನೂರು ಸಮೀಪದ ಹೇರೂರು ಬಳಿ ಗಲಾಟೆ ನಡೆದಿದ್ದು, ಈ ವೇಳೆ ಶೃಂಗೇರಿ ತಾ.ಪಂ. ಇಓ ಸುದೀಪ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಕುಕ್ಕುಡಿಗೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಮತ್ತೊಂದೆಡೆ ಗಲಾಟೆ ನಡೆದ ವೇಳೆ ರವೀಂದ್ರ ಕುಕ್ಕುಡಿಗೆ ಅವರ ಜೊತೆಗಿದ್ದ ಕಾಂಗ್ರೆಸ್ ಕಾರ್ಯಕರ್ತ ನಾಗೇಶ್ ಕೂಡ ಇಓ ಸುದೀಪ್ ವಿರುದ್ಧ ದೂರು ನೀಡಿದ್ದು, ಕುಡಿದು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಎರಡೂ ಕಡೆಯಿಂದ ದೂರು ದಾಖಲಾಗಿದ್ದು ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಗಲಾಟೆ ಮಾಡಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಅಧಿಕಾರಿಗಳ ಮೇಲೆಯೇ ಹಲ್ಲೆ ಮಾಡಿದರೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದು ಹೇಗೆ ಎಂದು ಪ್ರಶ್ನಿಸಿರುವ ಪಿಡಿಓಗಳು, ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಹಾಗೂ ಹಲ್ಲೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.




